ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣ : 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳು ಎನ್‌ಐಎ ಬಲೆಗೆ..!

Prakhara News
2 Min Read

ಮಂಗಳೂರು : ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಭಾರಿ ಯಶಸ್ಸು ಗಳಿಸಿದೆ. ಸುಮಾರು ನಾಲ್ಕು ವರ್ಷಗಳಿಂದ ದೇಶದ ವಿವಿಧೆಡೆ ತಲೆಮರೆಸಿಕೊಂಡಿದ್ದ ಇಬ್ಬರು ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ದಕ್ಷಿಣ ಭಾರತದ ಎರಡು ರಾಜ್ಯಗಳಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ನಿವಾಸಿ ನೌಶಾದ್‌ (32) ಮತ್ತು ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಅಬ್ಧುಲ್‌ ನಾಸಿರ್‌ (41) ಬಂಧಿತ ಆರೋಪಿಗಳಾಗಿದ್ದಾರೆ. ಇವರನ್ನು ಕೇರಳ ಮತ್ತು ತಮಿಳುನಾಡಿನ ರಹಸ್ಯ ಅಡಗುದಾಣಗಳಲ್ಲಿ ಎನ್‌ಐಎ ತಂಡಗಳು ಏಕಕಾಲಕ್ಕೆ ದಾಳಿ ನಡೆಸಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿವೆ ಎಂದು ಮೂಲಗಳು ವರದಿ ಮಾಡಿವೆ.
2022ರ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ಪ್ರವೀಣ್ ನೆಟ್ಟಾರು ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣದ ತನಿಖೆಯನ್ನು ಅಂದಿನ ರಾಜ್ಯ ಸರ್ಕಾರ ಎನ್‌ಐಎಗೆ ವಹಿಸಿತ್ತು. ಪ್ರಸ್ತುತ ಬಂಧಿತನಾಗಿರುವ ನೌಶಾದ್, ಪ್ರವೀಣ್ ಹತ್ಯೆಗೈದ ಬಳಿಕ ಹಂತಕರು ಪೊಲೀಸರಿಂದ ತಪ್ಪಿಸಿಕೊಂಡು ಸುರಕ್ಷಿತವಾಗಿ ಓಡಿಹೋಗಲು ವಾಹನ ಚಾಲಕನಾಗಿ (Driver) ಪ್ರಮುಖವಾಗಿ ಸಹಾಯ ಮಾಡಿದ್ದ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಈಗಾಗಲೇ ಒಟ್ಟು 28 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (Charge Sheet) ಸಲ್ಲಿಸಿದ್ದಾರೆ. ಇವರಿಬ್ಬರ ಬಂಧನದೊಂದಿಗೆ ಪ್ರಕರಣದಲ್ಲಿ ಜೈಲು ಸೇರಿದವರ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಇನ್ನು ಐವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಈ ಹಿಂದೆ ಎನ್‌ಐಎ ಈ ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಭಾರಿ ನಗದು ಬಹುಮಾನ ನೀಡುವುದಾಗಿ ಘೋಷಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಸದ್ಯ ಕೇರಳ ಮತ್ತು ತಮಿಳುನಾಡಿನಲ್ಲಿ ಸಿಕ್ಕಿಬಿದ್ದಿರುವ ನೌಶಾದ್ ಹಾಗೂ ಅಬ್ದುಲ್ ನಾಸಿರ್‌ನನ್ನು ಹೆಚ್ಚಿನ ವಿಚಾರಣೆ ಮತ್ತು ಕಾನೂನು ಪ್ರಕ್ರಿಯೆಗಾಗಿ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕರೆದೊಯ್ದಿದ್ದಾರೆ.

Share This Article
Leave a Comment