ಮಂಗಳೂರು : ಮೊಬೈಲ್ ವಿಚಾರಕ್ಕಾಗಿ ಚಾಕುವಿನಿಂದ ಇರಿದು ಅಣ್ಣನ ಕೊಲೆ ; ತಮ್ಮನೇ ಆರೋಪಿ.

Prakhara News
1 Min Read

ಮಂಗಳೂರು : ಮೊಬೈಲ್ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ತಮ್ಮ ಚಾಕುವಿನಿಂದ ಇರಿದು ಅಣ್ಣನನ್ನು ಕೊಲೆ ಮಾಡಿರುವ ಘಟನೆ ನಗರದ ಬಿಜೈ ಕೊಟ್ಟಾರ ಕ್ರಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ.

ಮೃತರನ್ನು ಅಡಿವೆಪ್ಪ (40) ಎಂದು ಗುರುತಿಸಲಾಗಿದೆ. ಅವರ ತಮ್ಮ ರಾಜು (36) ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲದವರಾದ ಅಣ್ಣ-ತಮ್ಮಂದಿರು, ತಮ್ಮ ತಾಯಿಯೊಂದಿಗೆ ಕೊಟ್ಟಾರ ಕ್ರಾಸ್‌ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ತಾಯಿ ಸಣ್ಣ ಗೂಡಂಗಡಿ ನಡೆಸುತ್ತಿದ್ದು, ಇಬ್ಬರು ಮಕ್ಕಳು ಕೂಲಿ ಕೆಲಸ ಮಾಡಿಕೊಂಡಿದ್ದರು.

ಇಬ್ಬರಿಗೂ ವಿಪರೀತ ಕುಡಿತದ ಚಟವಿತ್ತು ಎನ್ನಲಾಗಿದೆ. ಭಾನುವಾರ ರಾತ್ರಿ ಸುಮಾರು 10.30ರಿಂದ 11 ಗಂಟೆಯ ನಡುವೆ ಮೊಬೈಲ್ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಜಗಳ ಹಾಗೂ ಹೊಡೆದಾಟ ನಡೆದಿದೆ. ಈ ವೇಳೆ ರಾಜು ಚಾಕುವಿನಿಂದ ಅಡಿವೆಪ್ಪ ಅವರಿಗೆ ಇರಿದಿದ್ದಾನೆ ಎನ್ನಲಾಗಿದೆ.

ತಾಯಿ ಅಂಗಡಿ ಮುಚ್ಚಿ ಮನೆಗೆ ಬಂದು ನೋಡಿದಾಗ ಅಡಿವೆಪ್ಪ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಉರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ರಾಜು ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share This Article
Leave a Comment