ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ; ಮುಲ್ಕಿ ಮೂಲದ ಯುವಕ ಸಾವು..!

Prakhara News
1 Min Read

ಮಂಗಳೂರು: ನಗರದ ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯ ಹೈಡ್ರೋ ಸಲ್ಫರ್ ಟ್ರೀಟ್‌ಮೆಂಟ್ ಘಟಕದಲ್ಲಿ (HSTU/CHT) ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟಕ್ಕೆ ಗುತ್ತಿಗೆ ಕಾರ್ಮಿಕರೊಬ್ಬರು ಪ್ರಾಣ ಕಳೆದುಕೊಂಡಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಸಾವನ್ನಪ್ಪಿದ ಕಾರ್ಮಿಕನನ್ನು ಮುಲ್ಕಿ ನಿವಾಸಿ, 30 ವರ್ಷ ಪ್ರಾಯದ ಮನೀಶ್ ಕರ್ಕೇರ ಎಂದು ಗುರುತಿಸಲಾಗಿದೆ. ಇವರು ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಬುಧವಾರ ಮಧ್ಯಾಹ್ನ ಎಂಆರ್‌ಪಿಎಲ್‌ನ ಸಿಹೆಚ್‌ಟಿ (CHT – Hydro Sulphur Treatment Unit) ಘಟಕದಲ್ಲಿ ದಿಢೀರ್ ಭಾರಿ ಪ್ರಮಾಣದ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿ ಉರಿದಿದೆ. ಸ್ಫೋಟದ ತೀವ್ರತೆಗೆ ಪರಿಸರದಲ್ಲಿ ದಟ್ಟ ಬೆಂಕಿ ಹಾಗೂ ಹೊಗೆ ಆವರಿಸಿಕೊಂಡಿತ್ತು. ಘಟನೆಯಲ್ಲಿ ಮನೀಶ್ ಅವರ ದೇಹ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಫೋಟದ ವೇಳೆ ಕರ್ತವ್ಯದಲ್ಲಿದ್ದ ರಾಜೇಶ್ ಬ್ಯಾಪ್ಟಿಸ್ಟ್ ಎಂಬ ಕಾರ್ಮಿಕ ಶೇ. 35ರಷ್ಟು ಸುಟ್ಟ ಗಾಯಗಳಿಂದ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಮತ್ತಷ್ಟು 8 ಮಂದಿ ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ. ದುರಂತ ಸಂಭವಿಸಿದ ತಕ್ಷಣವೇ ಸ್ಥಳಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹಾಗೂ ಜಿಲ್ಲಾಧಿಕಾರಿ ದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತಂದಿದ್ದಾರೆ.

Share This Article
Leave a Comment