ಮಂಗಳೂರು: ಹೆಂಡತಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ, ಪತಿಯೇ ಚೂರಿಯಿಂದ ಭೀಕರವಾಗಿ ಇರಿದು ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆ ಎಂಬಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಸೋನಾಲಿ (30) ಮೃತ ದುರ್ದೈವಿ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಾರ್ಕಬನಹಳ್ಳಿಯ ಶಿವಪ್ಪ ಮಾದರ್ ಎಂಬುವವರ ಪುತ್ರ ಶಿವಲಿಂಗಪ್ಪ (40) ಬಂಧಿತ ಆರೋಪಿಯಾಗಿದ್ದಾನೆ. ಈ ಕುರಿತು ಮಂಗಳೂರು ಸಿಟಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅಧಿಕೃತ ಮಾಹಿತಿ ನೀಡಿದ್ದಾರೆ.


ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ಈ ದಂಪತಿ ವಾಸವಾಗಿದ್ದರು. ಅಕ್ಟೋಬರ್ 12 ರಂದು ದಂಪತಿ ನಡುವೆ ಪತ್ನಿಯ ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ತೀವ್ರ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಆಕ್ರೋಶಗೊಂಡ ಆರೋಪಿ ಶಿವಲಿಂಗಪ್ಪ, ಮನೆಯಲ್ಲಿದ್ದ ಚೂರಿಯಿಂದ ಪತ್ನಿ ಸೋನಾಲಿಯನ್ನು ಮನಬಂದಂತೆ ಇರಿದು ಕೊಲೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಭೀಕರ ಘಟನೆ ಕುರಿತು ತಕ್ಷಣವೇ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಎಚ್ಚೆತ್ತ ಕಾವೂರು ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ, ತಲೆಮರೆಸಿಕೊಳ್ಳಲು ಯತ್ನಿಸಿದ ಆರೋಪಿ ಶಿವಲಿಂಗಪ್ಪನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಕಾವೂರು ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.


