ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ಮೃತ ರಾಜೇಶ್ ಡಿಸಿಲ್ವ ಅವರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಬ್ಯಾಪಿಸ್ಟ್ ಡಿಸಿಲ್ವ ಎಂಬುವವರ ಐವರು ಮಕ್ಕಳ ಪೈಕಿ ಒಬ್ಬರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು. ಅ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಎಂಆರ್ಪಿಎಲ್ನ ಫೇಸ್-3ರ ಸಿಎಚ್ಟಿಯು (Coker Hydro Treating Unit) ಪ್ಲಾಂಟ್ನಲ್ಲಿ ಕಳೆದ ಸೆಪ್ಟೆಂಬರ್ 30ರಂದು ಭಾರೀ ಸ್ಫೋಟ ಸಂಭವಿಸಿತ್ತು. ಅಂದು ಸಂಭವಿಸಿದ ದುರಂತದಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದರು.
ಅದೇ ಘಟನೆಯಲ್ಲಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ರಾಜೇಶ್ ಡಿಸಿಲ್ವ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಐಸಿಯು (ICU) ಘಟಕದಲ್ಲಿ ತೀವ್ರ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರ ದೇಹವನ್ನು ಇಂದು ಸಂಜೆಯ ವೇಳೆ ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ (Post-mortem) ನಡೆಸಲಾಗುವುದು. ಬಳಿಕ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.


