ಮಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 23 ವರ್ಷದ ಯುವಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 3 ಕೆ.ಜಿ. 800 ಗ್ರಾಂ ಗಾಂಜಾ ಸೇರಿದಂತೆ ಕಾರು ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.


ನವೆಂಬರ್ 5ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡಲು ತಂದಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಪಣಂಬೂರು ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡ್ನೂರು ನಿವಾಸಿ ಮೊಹಮ್ಮದ್ ನಿಸಾರ್ (23) ಎಂದು ಗುರುತಿಸಲಾಗಿದೆ.

ವಶಪಡಿಸಿಕೊಂಡ ವಸ್ತುಗಳು:
3 ಕೆ.ಜಿ. 800 ಗ್ರಾಂ ಗಾಂಜಾ – ಅಂದಾಜು ಮೌಲ್ಯ ₹1,90,000
ಒಂದು ಮೊಬೈಲ್ ಫೋನ್ – ₹4,000
ಗಾಂಜಾ ಸಾಗಾಟಕ್ಕೆ ಬಳಸಿದ ಕಾರು (KL 14 1662) – ₹2,00,000
ಒಟ್ಟು ₹3,94,000 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹಲವು ಪ್ರದೇಶಗಳಲ್ಲಿ ಗಾಂಜಾ ಮಾರಾಟ!:
ಆರೋಪಿಯು ಸುರತ್ಕಲ್, ಪಣಂಬೂರು, ಕಾವೂರು ಸೇರಿದಂತೆ ಮಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದನೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಹಿಂದೆ ಕೂಡ ಹಲವು ಬಾರಿ ಮಂಗಳೂರು ನಗರದಲ್ಲಿ ಗಾಂಜಾ ಮಾರಾಟ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 137/2026ರಂತೆ NDPS ಕಾಯ್ದೆಯ ಕಲಂ 8(C), 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


