ಮಂಗಳೂರು: ಮತ್ತೊಂದು ಪೋಕ್ಸೊ ಪ್ರಕರಣದಲ್ಲಿ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ಮರುಬಂಧನ..!

Prakhara News
1 Min Read

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಕ್ಯಾಥೊಲಿಕ್ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ (65) ಅವರನ್ನು ಮತ್ತೊಬ್ಬ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮರುಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಸೇಂಟ್ ಸೆಬಾಸ್ಟಿಯನ್ ಚರ್ಚ್‌ಗೆ 2026ರ ಮೇ 13ರಂದು ಪ್ರಾರ್ಥನೆ ಸಲ್ಲಿಸಲು ಬಂದಿದ್ದ 13 ವರ್ಷದ ಬಾಲಕನಿಗೆ ಫಾದರ್ ಸಿಪ್ರಿಯನ್ ಪಿಂಟೊ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ದೂರಿನ ಮೇರೆಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 75(2) ಹಾಗೂ ಪೋಕ್ಸೊ (POCSO) ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿದ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತನಿಖೆಯ ಹೊಣೆಯನ್ನು ಕೇಂದ್ರ ಉಪವಿಭಾಗದ ಎಸಿಪಿ ರವೀಶ್ ನಾಯಕ್ ಅವರಿಗೆ ವಹಿಸಿದ್ದರು.

ಎಫ್‌ಐಆರ್ ದಾಖಲಾದ ಸಂದರ್ಭದಲ್ಲಿ ಆರೋಪಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ತಕ್ಷಣ ಬಂಧಿಸಿರಲಿಲ್ಲ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾದ ಬೆನ್ನಲ್ಲೇ ಪೊಲೀಸರು ಅವರನ್ನು ವಶಕ್ಕೆ ಪಡೆದು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನ ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್‌ನ ಧರ್ಮಗುರುವಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಮೊದಲ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಅಕ್ಟೋಬರ್ 18ರಂದು ಬಂಧಿತರಾಗಿದ್ದ ಅವರು ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದು, ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದರು.

ಇದೀಗ ಪೆರ್ಮನ್ನೂರು ಚರ್ಚ್ ಪ್ರಕರಣದಲ್ಲಿ ಮರುಬಂಧನಕ್ಕೊಳಗಾಗಿ ಮತ್ತೆ ಜೈಲು ಸೇರಿದ್ದು, ಎರಡೂ ಪ್ರಕರಣಗಳ ಕುರಿತು ಪೊಲೀಸರು ಸಮಗ್ರ ತನಿಖೆ ಮುಂದುವರಿಸಿದ್ದಾರೆ.

Share This Article
Leave a Comment