ಮಂಗಳೂರು: ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿರುವ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದಲೇ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಕುಟುಂಬಸ್ಥರೇ ಬಲವಂತವಾಗಿ ಕರೆದೊಯ್ದಿದ್ದಾರೆ ಎನ್ನಲಾಗಿದ್ದು, ಪ್ರಕರಣ ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ನಡುವೆ ಕಾಲೇಜಿನ ಡೀನ್ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಘಟನೆಯ ಕುರಿತು ಮಹತ್ವದ ಮಾಹಿತಿಗಳನ್ನು ನೀಡಿದ್ದಾರೆ.


ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಇತ್ತೀಚಿನ ದಿನಗಳಲ್ಲಿ ಹಾಸ್ಟೆಲ್‌ನಿಂದ ಹೊರಗೆ ಹೋಗುತ್ತಿದ್ದು, ಕಾಲೇಜಿನ ತರಗತಿಗಳಿಗೂ ಹಾಜರಾಗುತ್ತಿರಲಿಲ್ಲ ಎನ್ನಲಾಗಿದೆ. ಈ ವಿಚಾರ ಹೆತ್ತವರಿಗೆ ತಿಳಿದು ಕುಟುಂಬದಲ್ಲಿ ಮನಸ್ತಾಪ ಉಂಟಾಗಿತ್ತು. ಇದೇ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ತನ್ನ ಹೆತ್ತವರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು ಎಂದು ಕಾಲೇಜಿನ ಡೀನ್ ಡಾ. ಶಹನವಾಝ್ ಮಾಣಿಪ್ಪಾಡಿ ತಿಳಿಸಿದ್ದಾರೆ.

ಇನ್ನು, ಕಳೆದ ಎರಡು ದಿನಗಳಿಂದ ವಿದ್ಯಾರ್ಥಿನಿ ಹಾಸ್ಟೆಲ್‌ಗೆ ಮರಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಬಳಿಕ ಪೊಲೀಸರು ವಿದ್ಯಾರ್ಥಿನಿಯನ್ನು ಕಾಲೇಜಿಗೆ ಕರೆತಂದಿದ್ದರು. ಗುರುವಾರ ಮನೆಗೆ ಬರುವಂತೆ ಹೆತ್ತವರು ಕರೆದಾಗ ವಿದ್ಯಾರ್ಥಿನಿ ನಿರಾಕರಿಸಿದ್ದರೂ, ಆಕೆಯನ್ನು ಬಲವಂತವಾಗಿ ಕರೆದೊಯ್ಯಲಾಗಿದೆ ಎಂದು ಡೀನ್ ಮಾಹಿತಿ ನೀಡಿದ್ದಾರೆ.

ಹೆತ್ತವರು ಮತ್ತು ವಿದ್ಯಾರ್ಥಿನಿಯ ನಡುವೆ ವೈಯಕ್ತಿಕ ವಿಚಾರಗಳಿಗೆ ಸಂಬಂಧಿಸಿದಂತೆ ಮನಸ್ತಾಪವಿತ್ತು. ಕುಟುಂಬಸ್ಥರೇ ಆಕೆಯನ್ನು ಕರೆದೊಯ್ಯುತ್ತಿದ್ದ ಕಾರಣ ಕಾಲೇಜಿನ ಸಿಬ್ಬಂದಿ ಮಧ್ಯಪ್ರವೇಶಿಸಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇನ್ನೊಂದೆಡೆ, ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ವಿದ್ಯಾರ್ಥಿನಿ ವಯಸ್ಕಳಾಗಿದ್ದು, ತನ್ನ ಇಚ್ಛೆಗೆ ವಿರುದ್ಧವಾಗಿ ಆಕೆಯನ್ನು ಬಲವಂತವಾಗಿ ಕರೆದೊಯ್ಯುವುದು ಕಾನೂನುಬಾಹಿರ ಎಂದು ತಿಳಿಸಿದ್ದಾರೆ.

ವಯಸ್ಕ ಯುವತಿಗೆ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಸಂಪೂರ್ಣ ಹಕ್ಕಿದೆ. ಘಟನೆ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರೆ, ವಾಹನವನ್ನು ದೂರ ಹೋಗುವ ಮೊದಲೇ ತಡೆದು ನಿಲ್ಲಿಸಲು ಸಾಧ್ಯವಾಗುತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಒಟ್ಟಿನಲ್ಲಿ, ಕಾಲೇಜು ಆವರಣದಲ್ಲೇ ನಡೆದಿರುವ ಈ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ವಿದ್ಯಾರ್ಥಿನಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕರೆದೊಯ್ಯಲಾಗಿದೆಯೇ ಎಂಬುದರ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.


