ಮೈಸೂರು ಕಂಬಳಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರೋಧ..!

Prakhara News
1 Min Read

ಮಂಗಳೂರು : ಮೈಸೂರು ದಸರಾ ಸಂದರ್ಭದಲ್ಲಿ ಮೈಸೂರಿನಲ್ಲಿ ನಡೆಸಬೇಕೆಂದಿರುವ ಕಂಬಳಕ್ಕ ಇದೀಗ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಮೈಸೂರು ರಾಜವಂಶಸ್ಥ ಸಂಸದ ಯದುವೀರ್ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮೈಸೂರಿನಲ್ಲಿ ಕಂಬಳ ನಡೆಸುವ ಬಗ್ಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಕುಮಾರಸ್ವಾಮಿ ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ. ಈವರೆಗೂ ನಡೆದುಕೊಂಡು ಬಂದಿರುವ ದಸರಾಕ್ಕೆ ಧಕ್ಕೆ ತರುವ ಪ್ರಯತ್ನ ಖಂಡಿತ ಬೇಡ.

ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕ. ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ ಹೌದು. ಅದನ್ನು ಮೈಸೂರಿಗೆ ತಂದು ದೈವಿಕ ಹಿನ್ನೆಲೆಯ ಆ ಪರಂಪರೆ, ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲಾಗದು. ಕರಾವಳಿ ಪ್ರದೇಶ ಹಸಿರು ಮತ್ತು ನೀರಿನ ಸಂಗಮ. ಇಂಥ ಪ್ರಾಕೃತಿಕ ಹಿನ್ನೆಲೆಯಲ್ಲಿ ಕಂಬಳವನ್ನು ಕಣ್ತುಂಬಿಕೊಳ್ಳುವುದೇ ಧನ್ಯತೆಯ ಅನುಭವ ಎನ್ನುವುದು ನನ್ನ ಭಾವನೆ. ಹೀಗಾಗಿ ಮೈಸೂರು ಮತ್ತು ಕರಾವಳಿ ಜನರ ಭಾವನೆಗಳಿಗೆ ನೋವುಂಟು ಮಾಡುವುದು ಬೇಕಿಲ್ಲ. ಎಂದು ಹೇಳಿದ್ದಾರೆ.

ಮತ್ತೊಂದೆಡೆ ಮೈಸೂರಿನಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ದಸರಾ ವೇಳೆ ಕಂಬಳ ಆಯೋಜಿಸುವುದು ಸೂಕ್ತವಲ್ಲ. ಸರ್ಕಾರ ಹಠಮಾರಿ ಧೋರಣೆ ಬಿಟ್ಟು ಮೈಸೂರಿನ ಜನರ ಸಾಂಸ್ಕೃತಿಕ ಭಾವನೆಗಳಿಗೆ ಗೌರವ ನೀಡಬೇಕು ಎಂದು ಒತ್ತಾಯಿಸಿದರು. ಕರಾವಳಿ ಭಾಗದ ವಿಶಿಷ್ಟ ಪರಂಪರೆಯಾದ ಕಂಬಳಕ್ಕೆ ತನ್ನದೇ ಆದ ಶ್ರೀಮಂತ ಇತಿಹಾಸವಿದೆ. ಅದನ್ನು ಕರಾವಳಿ ಜಿಲ್ಲೆಗಳಲ್ಲೇ ಅತ್ಯಂತ ಅದ್ದೂರಿಯಾಗಿ ಆಯೋಜಿಸಲಿ, ಅದಕ್ಕೆ ನಮ್ಮ ಸಂಪೂರ್ಣ ಸಹಕಾರವಿರಲಿದೆ. ಆದರೆ, ಕರಾವಳಿಯ ಪರಂಪರೆಯನ್ನು ಮೈಸೂರಿನ ದಸರಾ ಸಂಸ್ಕೃತಿಯೊಂದಿಗೆ ಬೆರೆಸುವುದು ಬೇಡ ಎಂದು ವಿಜಯೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Share This Article
Leave a Comment